ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಸಿಐಡಿ ತನಿಖೆಗೆ :ಸಿಎಂ ಆದೇಶ
ಉಡುಪಿ:ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ.ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು,ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು.ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ,ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿತ್ತು.