ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ :ಮುಖ್ಯ ಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದರು.ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು.ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ,ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ,ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.
ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆ :ಪ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ,ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.
ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ.ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.
ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಭಿಪ್ರಾಯಪಟ್ಟರು.
ಸಚಿವ ಕೃಷ್ಣ ಭೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕ ರ್ ಉಪಸ್ಥಿತರಿದ್ದರು.





















































































































































































































































































































































































































































































































































































































































































































































































































































































































































































































































































































































































































































































































































































































































































