ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ
ಮಂಗಳೂರು:ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ಮಂಗಳೂರಿಗೆ ಆಗಮಿಸಿದ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಲಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.



















































































































































































































































































































































































































































































































































































































































































































































































































































































































































































































































































































































































































































































































































































































































































